logo
भारतवाणी
bharatavani  
logo
Knowledge through Indian Languages
Bharatavani

Computer Tantrajnana Padavivarana Kosha
A B C D E F G H I J K L M N O P Q R S T U V W X Y Z

Please click here to read PDF file Computer Tantrajnana Padavivarana Kosha

SEO
ಎಸ್‌ಇಒ
(ರೂಪಿಸಬೇಕಿದೆ)
ಸರ್ಚ್ ಇಂಜನ್ ಆಪ್ಟಿಮೈಸೇಶನ್; ಸರ್ಚ್ ಫಲಿತಾಂಶದಲ್ಲಿ ಉತ್ತಮ ಸ್ಥಾನ ಪಡೆಯಲು ಜಾಲತಾಣಗಳು ಅನುಸರಿಸುವ ಕ್ರಮಗಳು
ವಿಶ್ವವ್ಯಾಪಿ ಜಾಲದಲ್ಲಿ (ವರ್ಲ್ಡ್‌ವೈಡ್ ವೆಬ್) ಏನು ಮಾಹಿತಿ ಬೇಕೆಂದರೂ ನಾವು ಥಟ್ಟನೆ ಸರ್ಚ್ ಇಂಜನ್‌ಗಳತ್ತ ಮುಖಮಾಡುತ್ತೇವೆ. ಹಾಗೆ ಸರ್ಚ್ ಮಾಡುವಾಗಲೂ ಅಷ್ಟೆ, ನಾವು ಗಮನಿಸುವುದು ಫಲಿತಾಂಶ ಪಟ್ಟಿಯ ಮೊದಲ ಕೆಲ ಸ್ಥಾನಗಳಲ್ಲಿರುವ ತಾಣಗಳನ್ನು ಮಾತ್ರವೇ. ಹೀಗಾಗಿಯೇ ಬಹಳಷ್ಟು ಜಾಲತಾಣಗಳು ಸರ್ಚ್ ಫಲಿತಾಂಶಗಳಲ್ಲಿ ಪ್ರಮುಖವಾಗಿ ಕಾಣಿಸಿಕೊಳ್ಳಲು ಪ್ರಯತ್ನಗಳನ್ನು ಮಾಡುತ್ತಲೇ ಇರುತ್ತವೆ. ಆ ಮೂಲಕ ಹೆಚ್ಚಿನ ಓದುಗರನ್ನು ತಮ್ಮತ್ತ ಸೆಳೆಯುವ, ತಮ್ಮ ವಹಿವಾಟನ್ನು ವಿಸ್ತರಿಸಿಕೊಳ್ಳುವ ಉದ್ದೇಶ ಅವುಗಳದು. ಸರ್ಚ್ ಫಲಿತಾಂಶದಲ್ಲಿ ಉತ್ತಮ ಸ್ಥಾನ ಪಡೆಯಲು ಜಾಲತಾಣಗಳು ಅನುಸರಿಸುವ ಕ್ರಮಗಳನ್ನು ಒಟ್ಟಾರೆಯಾಗಿ ಸರ್ಚ್ ಇಂಜನ್ ಆಪ್ಟಿಮೈಸೇಶನ್ (ಎಸ್‌ಇಒ) ಎಂದು ಕರೆಯುತ್ತಾರೆ. ಬೇರೆಬೇರೆ ಸರ್ಚ್ ಇಂಜನ್‌ಗಳು ಹೇಗೆ ಕೆಲಸಮಾಡುತ್ತವೆ, ಅವುಗಳ ಬಳಕೆದಾರರು ಏನನ್ನು ಹುಡುಕುತ್ತಾರೆ, ಹುಡುಕಲು ಹೆಚ್ಚಾಗಿ ಬಳಕೆಯಾಗುವ ಕೀವರ್ಡ್‌ಗಳು ಯಾವುವು ಎನ್ನುವುದನ್ನೆಲ್ಲ ಎಸ್‌ಇಒ ತಂತ್ರಗಳು ಗಮನದಲ್ಲಿಟ್ಟುಕೊಳ್ಳುತ್ತವೆ. ಈ ಅಂಶಗಳಿಗೆ ಅನುಗುಣವಾಗಿ ಜಾಲತಾಣದ ವಿನ್ಯಾಸ ಹಾಗೂ ಅದರಲ್ಲಿರುವ ಮಾಹಿತಿಯನ್ನು ಬದಲಿಸಲಾಗುತ್ತದೆ. ಸರ್ಚ್ ಇಂಜನ್‌ಗಳಿಗೆ ಹುಡುಕಲು ಸುಲಭವಾಗುವಂತೆ ಅಗತ್ಯ ಬದಲಾವಣೆಗಳನ್ನು ಮಾಡಿಕೊಳ್ಳುವುದು, ತಾಣದಲ್ಲಿರುವ ಮಾಹಿತಿಯನ್ನು ವ್ಯವಸ್ಥಿತವಾಗಿ ವಿಂಗಡಿಸುವುದು, ಮಾಹಿತಿಯ ಜೊತೆಗೆ ಸೂಕ್ತ ಕೀವರ್ಡ್‌ಗಳನ್ನು ('ಟ್ಯಾಗ್') ಜೋಡಿಸಿಡುವುದು, ಓದುಗರಿಂದ ಒಳ್ಳೆಯ ಪ್ರತಿಕ್ರಿಯೆಗಳು ಬರುವಂತೆ - ಅವರು ತಾಣದ ಕೊಂಡಿಗಳನ್ನು ಹೆಚ್ಚುಹೆಚ್ಚಾಗಿ ಶೇರ್ ಮಾಡುವಂತೆ ನೋಡಿಕೊಳ್ಳುವುದು - ಇವೆಲ್ಲ ಎಸ್‌ಇಒ ಚಟುವಟಿಕೆಯ ಅಂಗಗಳೇ.

SSD
ಎಸ್‌ಎಸ್‌ಡಿ
(ರೂಪಿಸಬೇಕಿದೆ)
ಸಾಲಿಡ್ ಸ್ಟೇಟ್ ಡ್ರೈವ್; ಮಾಹಿತಿ ಶೇಖರಣೆಯಲ್ಲಿ ಹಾರ್ಡ್ ಡಿಸ್ಕ್‌ಗೆ ಪರ್ಯಾಯವಾಗಿ ಬೆಳೆಯುತ್ತಿರುವ ಹೆಚ್ಚು ಸಕ್ಷಮ - ವಿಶ್ವಾಸಾರ್ಹ ಸಾಧನ.
ಕಂಪ್ಯೂಟರಿನಲ್ಲಿ ಮಾಹಿತಿ ಸಂಗ್ರಹಿಸಿಡಲು ಹಾರ್ಡ್ ಡಿಸ್ಕ್‌ಗಳು ವ್ಯಾಪಕವಾಗಿ ಬಳಕೆಯಾಗುತ್ತವೆ. ಆದರೆ ಅವುಗಳಲ್ಲಿ ಮಾಹಿತಿಯನ್ನು ಓದಿ-ಬರೆಯುವ ವೇಗ ಕಡಿಮೆ, ಜೊತೆಗೆ ಯಾಂತ್ರಿಕ ವೈಫಲ್ಯದ ಸಾಧ್ಯತೆಯೂ ಇರುತ್ತದೆ. ಈ ಪರಿಸ್ಥಿತಿ ಬದಲಿಸಬೇಕೆಂದರೆ ಮಾಹಿತಿ ಶೇಖರಣೆಯಲ್ಲಿ ವಿಭಿನ್ನ ಮಾರ್ಗಗಳ ಬಳಕೆ ಅಗತ್ಯವಾಗುತ್ತದೆ. ಅಂತಹುದೊಂದು ಮಾರ್ಗವೇ ಸಾಲಿಡ್ ಸ್ಟೇಟ್ ಡ್ರೈವ್ (ಎಸ್‌ಎಸ್‌ಡಿ). ಹಾರ್ಡ್ ಡಿಸ್ಕ್‌ನ ತಟ್ಟೆಗಳ, ಚಲಿಸುವ ಭಾಗಗಳ ಜಾಗದಲ್ಲಿ ಇದು ಫ್ಲಾಶ್ ಮೆಮೊರಿ ಚಿಪ್‌ಗಳನ್ನು ಬಳಸುತ್ತದೆ. ಪೆನ್‌ಡ್ರೈವ್‌ಗಳಲ್ಲಿ ಬಳಕೆಯಾಗುವುದೂ ಫ್ಲಾಶ್ ಮೆಮೊರಿಯೇ, ಆದರೆ ಎಸ್‌ಎಸ್‌ಡಿಯಲ್ಲಿ ಇನ್ನೂ ಹೆಚ್ಚು ಕಾರ್ಯಕ್ಷಮತೆಯ ಚಿಪ್‌ಗಳು ಬಳಕೆಯಾಗುತ್ತವೆ ಅಷ್ಟೇ. ಎಸ್‌ಎಸ್‌ಡಿಗಳು ಹಾರ್ಡ್ ಡಿಸ್ಕ್‌ಗಿಂತ ಗಾತ್ರದಲ್ಲಿ ಚಿಕ್ಕದಾಗಿರುತ್ತವೆ, ಹೆಚ್ಚು ವೇಗವಾಗಿ ಕೆಲಸಮಾಡುತ್ತವೆ ಮತ್ತು ಅವುಗಳ ವಿಶ್ವಾಸಾರ್ಹತೆಯೂ ಹೆಚ್ಚು. ಜೊತೆಗೆ ಅವುಗಳ ಬೆಲೆಯೂ ಹೆಚ್ಚು: ಸದ್ಯ ಹಲವು ದುಬಾರಿ ಕಂಪ್ಯೂಟರುಗಳಲ್ಲಿ ಮಾತ್ರವೇ ಅವು ಬಳಕೆಯಾಗುತ್ತಿವೆ. ಹಾರ್ಡ್ ಡಿಸ್ಕ್ ಡ್ರೈವ್ ಹಾಗೂ ಸಾಲಿಡ್ ಸ್ಟೇಟ್ ಡ್ರೈವ್‌ಗಳೆರಡರ ತಂತ್ರಜ್ಞಾನಗಳನ್ನೂ ಒಟ್ಟಿಗೆ ಬಳಸುವ ಸಾಲಿಡ್ ಸ್ಟೇಟ್ ಹೈಬ್ರಿಡ್ ಡ್ರೈವ್ (ಎಸ್‌ಎಸ್‌ಎಚ್‌ಡಿ) ಎನ್ನುವ ಸಾಧನ ಕೂಡ ಇದೆ. ಸಾಮಾನ್ಯ ಹಾರ್ಡ್ ಡಿಸ್ಕ್ ಜೊತೆಗೆ ಕೊಂಚಮಟ್ಟಿನ ಸಾಲಿಡ್ ಸ್ಟೇಟ್ ಶೇಖರಣಾ ಸಾಮರ್ಥ್ಯವನ್ನೂ ಒದಗಿಸುವುದು ಈ ಸಾಧನದ ವೈಶಿಷ್ಟ್ಯ.

SQL
ಎಸ್‌ಕ್ಯೂಎಲ್
(ರೂಪಿಸಬೇಕಿದೆ)
ಸ್ಟ್ರಕ್ಚರ್ಡ್ ಕ್ವೆರಿ ಲ್ಯಾಂಗ್ವೆಜ್; ದತ್ತಸಂಚಯಗಳನ್ನು ನಿರ್ವಹಿಸುವಾಗ ನಮ್ಮ ಆದೇಶಗಳನ್ನು ದತ್ತಸಂಚಯಕ್ಕೆ ಹೇಳಲು ಬಳಕೆಯಾಗುವ ಭಾಷೆ
ಭಾರೀ ಪ್ರಮಾಣದ ದತ್ತಾಂಶವನ್ನು ಉಳಿಸಿಡಲು ದತ್ತಸಂಚಯ, ಅಂದರೆ ಡೇಟಾಬೇಸ್‌ಗಳು ನೆರವಾಗುತ್ತವೆ ಸರಿ. ಆದರೆ ದತ್ತಾಂಶದ ನಿರ್ವಹಣೆ ಒಂದೇಸಲಕ್ಕೆ ಮುಗಿಯುವ ಕೆಲಸವಲ್ಲ: ಹೊಸ ದತ್ತಾಂಶವನ್ನು ಸೇರಿಸುವುದು, ಹಳೆಯದನ್ನು ಬದಲಿಸುವುದು, ಬೇಡದ್ದನ್ನು ಅಳಿಸಿಹಾಕುವುದು - ಹೀಗೆ ಇಲ್ಲಿ ನೂರೆಂಟು ಕೆಲಸಗಳು ನಡೆಯುತ್ತಲೇ ಇರುತ್ತವೆ. ಇದೆಲ್ಲ ಕೆಲಸಗಳಲ್ಲಿ ನಮಗೇನು ಬೇಕೆಂದು ದತ್ತಸಂಚಯಕ್ಕೆ ಹೇಳಲು ಬಳಕೆಯಾಗುವ ಭಾಷೆಯೇ ಸ್ಟ್ರಕ್ಚರ್ಡ್ ಕ್ವೆರಿ ಲ್ಯಾಂಗ್ವೆಜ್. ತಾಂತ್ರಿಕ ಪರಿಭಾಷೆಯಲ್ಲಿ ಎಸ್‌ಕ್ಯೂಎಲ್ ಅಥವಾ ಸೀಕ್ವೆಲ್ ಎಂದು ಗುರುತಿಸುವುದು ಇದನ್ನೇ. ನಮಗೆ ಬೇಕಾದ ದತ್ತಾಂಶವನ್ನು (ಉದಾ: ನಿರ್ದಿಷ್ಟ ಅವಧಿಯಲ್ಲಿ ನಿರ್ದಿಷ್ಟ ಮೊತ್ತಕ್ಕಿಂತ ಹೆಚ್ಚು ಹಣವನ್ನು ಬ್ಯಾಂಕ್ ಖಾತೆಗೆ ಜಮಾ ಮಾಡಿದ ಗ್ರಾಹಕರು) ದತ್ತಸಂಚಯದಿಂದ ಪಡೆದುಕೊಳ್ಳಬೇಕೆಂದರೆ ಅಗತ್ಯ ನಿರ್ದೇಶನಗಳನ್ನು ಇದೇ ಭಾಷೆಯಲ್ಲಿ ಬರೆಯಬೇಕಾದ್ದು ಅಗತ್ಯ. ದತ್ತಾಂಶವನ್ನು ಬದಲಾಯಿಸಲು, ಅಳಿಸಿಹಾಕಲು, ಇರುವ ದತ್ತಾಂಶಕ್ಕೆ ಹೊಸ ವಿವರಗಳನ್ನು ಹೆಚ್ಚುವರಿಯಾಗಿ ಸೇರಿಸಲು ಅಗತ್ಯ ನಿರ್ದೇಶನಗಳೂ ಈ ಭಾಷೆಯಲ್ಲಿವೆ. ನಮ್ಮನಿಮ್ಮಂತಹ ಬಳಕೆದಾರರಷ್ಟೇ ಅಲ್ಲ, ಜಾಲತಾಣಗಳು ಹಾಗೂ ಇತರ ತಂತ್ರಾಂಶಗಳೂ ಎಸ್‌ಕ್ಯೂಎಲ್ ಅನ್ನು ಬಳಸುತ್ತವೆ. ಜಾಲತಾಣದಲ್ಲಿ ನೋಂದಣಿ ಸಂಖ್ಯೆಯನ್ನು ದಾಖಲಿಸಿ ಪರೀಕ್ಷಾ ಫಲಿತಾಂಶ ನೋಡುತ್ತೇವಲ್ಲ, ಅಂತಹ ಚಟುವಟಿಕೆಗಳ ಹಿಂದೆ ಇರುವುದು ಎಸ್‌ಕ್ಯೂಎಲ್ ಕೈವಾಡವೇ! ಎಸ್‌ಕ್ಯೂಎಲ್ ಅನ್ನು ೧೯೭೫ರಲ್ಲಿ ಮೊದಲ ಬಾರಿಗೆ ರೂಪಿಸಿದ್ದು ಐಬಿಎಂ ಸಂಸ್ಥೆಯ ಸಾಧನೆ. ಅಲ್ಲಿಂದ ಮುಂದಕ್ಕೆ ವಿವಿಧ ಡೇಟಾಬೇಸ್ ಮ್ಯಾನೇಜ್‌ಮೆಂಟ್ ಸಿಸ್ಟಂಗಳ (ಡಿಬಿಎಂಎಸ್) ಅಗತ್ಯಕ್ಕೆ ತಕ್ಕಂತೆ ಈ ಭಾಷೆ ಬದಲಾಗುತ್ತ ಬಂದಿದೆ. ಒರೇಕಲ್, ಎಸ್‌ಕ್ಯೂಎಲ್ ಸರ್ವರ್ ಮುಂತಾದ ಬೇರೆಬೇರೆ ಡಿಬಿಎಂಎಸ್‌ಗಳಲ್ಲಿ ಬಳಕೆಯಾಗುವ ಎಸ್‌ಕ್ಯೂಎಲ್‌ನಲ್ಲಿ ಕೊಂಚ ವ್ಯತ್ಯಾಸಗಳಿದ್ದರೂ ಅದರ ಮೂಲ ಸ್ವರೂಪ ಮಾತ್ರ ಒಂದೇ.

SDLC
ಎಸ್‌ಡಿಎಲ್‌ಸಿ
(ರೂಪಿಸಬೇಕಿದೆ)
ಸಿಸ್ಟಮ್ಸ್ ಡೆವೆಲಪ್‌ಮೆಂಟ್ ಲೈಫ್ ಸೈಕಲ್; ತಂತ್ರಾಂಶ ಅಭಿವರ್ಧನೆಯ ಪ್ರತಿಯೊಂದು ಹಂತದಲ್ಲೂ ಕೈಗೊಳ್ಳಬೇಕಾದ ನಿರ್ದಿಷ್ಟ ಚಟುವಟಿಕೆಗಳನ್ನು ವಿವರಿಸುವ ನಿಯಮಗಳ ಚೌಕಟ್ಟು
ಹೊಸದಾಗಿ ತಂತ್ರಾಂಶವೊಂದನ್ನು ಸಿದ್ಧಪಡಿಸುವ ಪ್ರಕ್ರಿಯೆಯಲ್ಲಿ ಅನೇಕ ಹಂತಗಳಿರುತ್ತವೆ. ಇಂತಹ ಪ್ರತಿಯೊಂದು ಹಂತದಲ್ಲೂ ಕೈಗೊಳ್ಳಬೇಕಾದ ನಿರ್ದಿಷ್ಟ ಚಟುವಟಿಕೆಗಳನ್ನು ವಿವರಿಸುವ ನಿಯಮಗಳ ಚೌಕಟ್ಟನ್ನು ಸಿಸ್ಟಮ್ಸ್ ಡೆವೆಲಪ್‌ಮೆಂಟ್ ಲೈಫ್ ಸೈಕಲ್ (ತಂತ್ರಾಂಶ ವ್ಯವಸ್ಥೆಗಳ ಅಭಿವರ್ಧನೆಯ ಜೀವನಚಕ್ರ) ಎಂದು ಕರೆಯುತ್ತಾರೆ. ಎಸ್‌ಡಿಎಲ್‌ಸಿ ಎನ್ನುವುದು ಇದೇ ಹೆಸರಿನ ಹ್ರಸ್ವರೂಪ. ಸಾಮಾನ್ಯ ಬಳಕೆಯಲ್ಲಿ 'ಸಾಫ್ಟ್‌ವೇರ್ ಡೆವೆಲಪ್‌ಮೆಂಟ್ ಲೈಫ್ ಸೈಕಲ್' ಎಂದು ಗುರುತಿಸುವುದೂ ಇದನ್ನೇ. ಎಸ್‌ಡಿಎಲ್‌ಸಿಯನ್ನು ತಮ್ಮ ಅಗತ್ಯಗಳಿಗೆ ತಕ್ಕಂತೆ ಅನುಷ್ಠಾನಗೊಳಿಸಲು ಸಂಸ್ಥೆಗಳು ಹಲವು ಕಾರ್ಯವಿಧಾನ ಮಾದರಿಗಳನ್ನು (ಪ್ರಾಸೆಸ್ ಮಾಡೆಲ್) ಬಳಸುತ್ತವೆ. ಮೂಲತಃ ಈ ಎಲ್ಲ ಮಾದರಿಗಳಲ್ಲೂ ಸಾಫ್ಟ್‌ವೇರ್ ಇಂಜಿನಿಯರಿಂಗ್ ಪರಿಕಲ್ಪನೆಯಲ್ಲಿರುವ ಮೂಲ ಹೆಜ್ಜೆಗಳೇ (ರಿಕ್ವೈರ್‌ಮೆಂಟ್ಸ್ ಅನಾಲಿಸಿಸ್, ಡಿಸೈನ್, ಡೆವೆಲಪ್‌ಮೆಂಟ್, ಟೆಸ್ಟಿಂಗ್ ಇತ್ಯಾದಿ) ಬಳಕೆಯಾಗುತ್ತವಾದರೂ ಆ ಹೆಜ್ಜೆಗಳ ಅನುಷ್ಠಾನ ಮಾತ್ರ ಭಿನ್ನವಾಗಿರುತ್ತದೆ. ವಾಟರ್‌ಫಾಲ್ ಮಾಡೆಲ್, ಇನ್‌ಕ್ರಿಮೆಂಟಲ್ ಮಾಡೆಲ್, ಅಜೈಲ್ - ಇವು ಕಾರ್ಯವಿಧಾನ ಮಾದರಿಗೆ ಕೆಲ ಉದಾಹರಣೆಗಳು. ಈ ಪೈಕಿ ವಾಟರ್‌ಫಾಲ್ ಮಾದರಿಯಲ್ಲಿ ತಂತ್ರಾಂಶ ಅಭಿವರ್ಧನೆಯ ಅಷ್ಟೂ ಕೆಲಸವನ್ನು ಒಟ್ಟಿಗೆ ಒಂದೇ ಕಂತಿನಲ್ಲಿ ಮುಗಿಸಲು ಪ್ರಯತ್ನಿಸಲಾಗುತ್ತದೆ. ಇದಕ್ಕೆ ವಿರುದ್ಧವಾಗಿ ಇನ್‌ಕ್ರಿಮೆಂಟಲ್ ಹಾಗೂ ಅಜೈಲ್ ಮಾದರಿಗಳಲ್ಲಿ ಇಡೀ ಪ್ರಕ್ರಿಯೆಯನ್ನು ಹಲವು ಭಾಗಗಳಾಗಿ ವಿಭಜಿಸಿಕೊಂಡು ಅವನ್ನು ಒಂದಾದನಂತರ ಒಂದರಂತೆ ಪೂರ್ಣಗೊಳಿಸಲಾಗುತ್ತದೆ.

Short URL
ಶಾರ್ಟ್ ಯುಆರ್‌ಎಲ್
(ರೂಪಿಸಬೇಕಿದೆ)
ಉದ್ದನೆಯ ಯುಆರ್‌ಎಲ್‌ಗಳನ್ನು ಕಿರಿದಾಗಿಸಿ ರೂಪಿಸಿಕೊಂಡ ಪುಟ್ಟ ವಿಳಾಸ
ಬೇರೆಬೇರೆ ಜಾಲತಾಣಗಳಿಗೆ ಭೇಟಿಕೊಡಲು ನಾವು ಬ್ರೌಸರ್ ತಂತ್ರಾಂಶಗಳನ್ನು ಬಳಸುತ್ತೇವಲ್ಲ, ಅದರ ಮೇಲ್ತುದಿಯಲ್ಲಿರುವ ವಿಳಾಸಪಟ್ಟಿಯಲ್ಲಿ (ಅಡ್ರೆಸ್ ಬಾರ್) ನಾವು ಭೇಟಿಕೊಟ್ಟಿರುವ ತಾಣ ಅಥವಾ ಪುಟದ ಪೂರ್ಣ ವಿಳಾಸವನ್ನು ನೋಡಬಹುದು. ಈ ವಿಳಾಸಕ್ಕೆ 'ಯೂನಿಫಾರ್ಮ್ ರಿಸೋರ್ಸ್ ಲೊಕೇಟರ್' ಅಥವಾ 'ಯುಆರ್‌ಎಲ್' ಎಂದು ಹೆಸರು. ನೀವು ಇಜ್ಞಾನ ಜಾಲತಾಣಕ್ಕೆ ಭೇಟಿಕೊಟ್ಟಿದ್ದೀರಿ ಎಂದುಕೊಂಡರೆ ನಿಮಗೆ ಮೊದಲು ಕಾಣಿಸುವ ಪುಟದ ಯುಆರ್‌ಎಲ್ ‘http://www.ejnana.com/' ಎಂದಿರುತ್ತದೆ. ಒಳಗಿನ ಪುಟಗಳಿಗೆ ಹೋದಂತೆ ಈ ಯುಆರ್‌ಎಲ್‌ನ ಉದ್ದ ಜಾಸ್ತಿಯಾಗುತ್ತ ಹೋಗುತ್ತದೆ (ಉದಾ: http://www.ejnana.com/p/blog-page_13.html). ಆನ್‌ಲೈನ್ ಶಾಪಿಂಗ್ ತಾಣಗಳಲ್ಲಂತೂ ನಾವು ಇನ್ನೂ ಉದ್ದನೆಯ ಯುಆರ್‌ಎಲ್‌ಗಳನ್ನು ನೋಡಬಹುದು. ಇಷ್ಟೆಲ್ಲ ಉದ್ದದ ವಿಳಾಸಗಳನ್ನು ನೆನಪಿಟ್ಟುಕೊಳ್ಳುವುದು, ಹಂಚಿಕೊಳ್ಳುವುದು ಕಷ್ಟ. ಈ ಸಮಸ್ಯೆಯನ್ನು ತಪ್ಪಿಸಲು ಸೃಷ್ಟಿಯಾಗಿರುವುದೇ 'ಶಾರ್ಟ್ ಯುಆರ್‌ಎಲ್' ಪರಿಕಲ್ಪನೆ. ತೀರಾ ಉದ್ದನೆಯ ಯುಆರ್‌ಎಲ್‌ಗಳನ್ನು ಕಿರಿದಾಗಿಸಿ ಪುಟ್ಟ ವಿಳಾಸಗಳನ್ನು ಸೃಷ್ಟಿಸುವುದು ಈ ಪರಿಕಲ್ಪನೆಯ ಉದ್ದೇಶ. ಇಂತಹ ಸೇವೆ ಒದಗಿಸುವ ಯಾವುದೇ ತಾಣಕ್ಕೆ (ಉದಾ: bit.ly, goo.gl, tinyurl.com) ಹೋದರೆ ಉದ್ದನೆಯ ವಿಳಾಸಗಳನ್ನು ಶಾರ್ಟ್ ಯುಆರ್‌ಎಲ್ ಆಗಿ ಪರಿವರ್ತಿಸಿಕೊಳ್ಳುವುದು ಸಾಧ್ಯ. ಎರಡೂ ವಿಳಾಸಗಳನ್ನು ನೆನಪಿಟ್ಟುಕೊಳ್ಳುವ ಇಂತಹ ತಾಣಗಳು ಅವೆರಡನ್ನೂ ಹೊಂದಿಸಿ ಬಳಕೆದಾರರು ಪುಟ್ಟ ವಿಳಾಸ ದಾಖಲಿಸಿದಾಗೆಲ್ಲ ಅವರನ್ನು ಮೂಲ ವಿಳಾಸಕ್ಕೇ ಕರೆದೊಯ್ಯುತ್ತವೆ.

Submarine Communications Cable
ಸಬ್‌ಮರೀನ್ ಕಮ್ಯೂನಿಕೇಶನ್ಸ್ ಕೇಬಲ್
(ರೂಪಿಸಬೇಕಿದೆ)
ವಿವಿಧ ರಾಷ್ಟ್ರಗಳ - ಖಂಡಗಳ ನಡುವೆ ಮಾಹಿತಿ ಸಂವಹನ ಸಾಧ್ಯವಾಗಿಸುವ ಸಮುದ್ರದಾಳದ ಕೇಬಲ್
ನಾವು ಮೊಬೈಲಿನಲ್ಲಿ ಮಾತನಾಡುತ್ತೇವೆ, ಅಂತರಜಾಲ ಸಂಪರ್ಕ ಬಳಸುತ್ತೇವೆ. ಇದೆಲ್ಲ ಹೇಗೆ ಸಾಧ್ಯವಾಗುತ್ತದೆ ಎಂದು ಕೇಳಿದರೆ ಕಿಟಕಿಯಿಂದಾಚೆ ಕಾಣುವ ಮೊಬೈಲ್ ಟವರ್ ಅನ್ನು ತೋರಿಸುತ್ತೇವೆ. ಆದರೆ ಅಲ್ಲಿಂದ ಮುಂದಿನ ಸಂಪರ್ಕ ಸಾಧ್ಯವಾಗುವುದು, ನಮ್ಮ ಕರೆ ಬೇರೆಲ್ಲೋ ಇರುವ ಇನ್ನೊಬ್ಬರನ್ನು ತಲುಪುವುದು ಹೇಗೆ? ಉತ್ತರ ಗೊತ್ತಿಲ್ಲದಿದ್ದರೆ ಆಕಾಶ ನೋಡಬೇಕಿಲ್ಲ, ಕಾಲ ಕೆಳಗಿನ ನೆಲವನ್ನಷ್ಟೇ ನೋಡಿದರೆ ಸಾಕು. ಏಕೆಂದರೆ ಮೊಬೈಲ್ ಟವರ್‌ಗಳ ನಂತರದ ಹಂತದ ಸಂವಹನದಲ್ಲಿ ಪ್ರಮುಖ ಪಾತ್ರ ವಹಿಸುವುದು ನೆಲದಡಿಯ ಕೇಬಲ್ಲುಗಳು. ಇಲ್ಲಿ ಬಳಕೆಯಾಗುವುದೇ ಆಪ್ಟಿಕಲ್ ಫೈಬರ್ ಕೇಬಲ್ ಅಥವಾ ಓಎಫ್‌ಸಿ. ನೆಲದ ಮೇಲೇನೋ ಸರಿ, ಬಡಾವಣೆಯಿಂದ ಬಡಾವಣೆಗೆ - ಊರಿಂದ ಊರಿಗೆ ಈ ಕೇಬಲ್ಲುಗಳು ಸಂಪರ್ಕ ಕಲ್ಪಿಸುತ್ತವೆ. ಆದರೆ ಸಂವಹನದ ಸಮುದ್ರೋಲ್ಲಂಘನ? ಅಲ್ಲೂ ಇಂತಹ ಕೇಬಲ್ಲುಗಳೇ ಬಳಕೆಯಾಗುತ್ತವೆ! ವಿವಿಧ ರಾಷ್ಟ್ರಗಳ - ಖಂಡಗಳ ನಡುವೆ ಸಂವಹನ ಸಾಧ್ಯವಾಗಿಸುವ ಇಂತಹ ಕೇಬಲ್ಲುಗಳನ್ನು ಸಬ್‌ಮರೀನ್ ಕಮ್ಯೂನಿಕೇಶನ್ಸ್ ಕೇಬಲ್ಲುಗಳೆಂದು ಕರೆಯುತ್ತಾರೆ. ನಾವು-ನೀವು ರಸ್ತೆಬದಿಯಲ್ಲಿ ಕಾಣುವ ಕೇಬಲ್ಲುಗಳಿಗಿಂತ ಹೆಚ್ಚು ಸದೃಢ ರಚನೆಯ ಈ ಕೇಬಲ್ಲುಗಳನ್ನು ಸಮುದ್ರದಾಳದಲ್ಲಿ ಹುದುಗಿಸಿಡಲು ವಿಶೇಷ ಹಡಗುಗಳು ಬಳಕೆಯಾಗುತ್ತವೆ. ಇಂತಹ ಕೇಬಲ್ಲುಗಳನ್ನು ಅಳವಡಿಸಿ ನಿರ್ವಹಿಸುವುದೇ ಹಲವು ದೊಡ್ಡ ಸಂಸ್ಥೆಗಳ ಕೆಲಸ.

Soft Copy - Hard Copy
ಸಾಫ್ಟ್‌ ಕಾಪಿ - ಹಾರ್ಡ್ ಕಾಪಿ
(ರೂಪಿಸಬೇಕಿದೆ)
ಡಿಜಿಟಲ್ ರೂಪದಲ್ಲಿರುವ ಕಡತ ಹಾಗೂ ಅವುಗಳ ಮುದ್ರಿತ ರೂಪವನ್ನು ಪ್ರತಿನಿಧಿಸುವ ಹೆಸರುಗಳು
ಕೆಲವು ದಶಕಗಳ ಹಿಂದೆ ಕಡತ ಎಂದರೆ ಅದು ಕಾಗದದ ಮೇಲೆಯೇ ಇರಬೇಕಿದ್ದು ಅನಿವಾರ್ಯವಾಗಿತ್ತು. ಮಾಹಿತಿ ತಂತ್ರಜ್ಞಾನ ಬೆಳೆದಂತೆ ಈ ಪರಿಸ್ಥಿತಿ ಬದಲಾಗಿದ್ದು ನಮಗೆಲ್ಲ ಗೊತ್ತೇ ಇದೆ. ಕಂಪ್ಯೂಟರ್ ಬಳಸಿ ಮಾಹಿತಿಯನ್ನು ಡಿಜಿಟಲ್ ರೂಪದಲ್ಲಿ ಉಳಿಸಿಡಲು ಸಾಧ್ಯವಾದಮೇಲೆ ಅಲ್ಲೂ ಕಡತಗಳನ್ನು ರೂಪಿಸುವುದು ಸಾಧ್ಯವಾಯಿತು. 'ಸಾಫ್ಟ್ ಕಾಪಿ' ಎಂದು ಗುರುತಿಸಲಾಗುವುದು ಕಡತಗಳ ಈ ಡಿಜಿಟಲ್ ರೂಪವನ್ನೇ. ಇದೇರೀತಿ ಭೌತಿಕ ರೂಪದಲ್ಲಿರುವ ಕಡತವನ್ನು 'ಹಾರ್ಡ್ ಕಾಪಿ' ಎಂದು ಕರೆಯುತ್ತಾರೆ. ಸಾಫ್ಟ್‌ಕಾಪಿ - ಹಾರ್ಡ್‌ಕಾಪಿಗಳ ನಡುವೆ ಇನ್ನೂ ಅನೇಕ ವ್ಯತ್ಯಾಸಗಳಿವೆ. ಸಾಫ್ಟ್‌ಕಾಪಿಗಳು ಕಾಗದ ಬಳಸುವುದಿಲ್ಲವಾದ್ದರಿಂದ ಆ ಮಟ್ಟಿಗೆ ಅವು ಪರಿಸರಸ್ನೇಹಿ; ಅವುಗಳನ್ನು ರೂಪಿಸಲು ಖರ್ಚೂ ಕಡಿಮೆ. ಪುಸ್ತಕದ ವಿಷಯಕ್ಕೆ ಬಂದರಂತೂ ಸಾಫ್ಟ್ ಕಾಪಿಯ ಪ್ರಕಟಣೆ (ಇ-ಪುಸ್ತಕ) ಹಾರ್ಡ್ ಕಾಪಿ ಪ್ರಕಟಣೆಯ ಹೋಲಿಕೆಯಲ್ಲಿ ಅತ್ಯಂತ ಕಡಿಮೆ ಖರ್ಚಿನ ವ್ಯವಹಾರ. ಸಾಫ್ಟ್ ಕಾಪಿಯನ್ನು ಬದಲಿಸುವುದು - ಹಂಚುವುದು ಸುಲಭವಾದ್ದರಿಂದ ಅದರ ನಿರ್ವಹಣೆಯೂ ಬಹಳ ಸುಲಭ. ಕಾಗದರೂಪದಲ್ಲಿರುವ ಪ್ರಮುಖ ದಾಖಲೆಗಳನ್ನು ವಾತಾವರಣದ ಪ್ರಭಾವದಿಂದ ಸುರಕ್ಷಿತವಾಗಿಡಲು ನಾವು ಎಚ್ಚರವಹಿಸುತ್ತೇವಲ್ಲ, ಅದೇ ರೀತಿ ಡಿಜಿಟಲ್ ರೂಪದಲ್ಲಿರುವ ಕಡತಗಳನ್ನು ಕಾಯ್ದಿಡಲಿಕ್ಕೂ ಅನೇಕ ಕ್ರಮಗಳನ್ನು ಕೈಗೊಳ್ಳಬೇಕಾಗುತ್ತದೆ. ಹಾರ್ಡ್ ಡಿಸ್ಕ್‌ನಂತಹ ಸಾಧನಗಳ ಯಾಂತ್ರಿಕ ವೈಫಲ್ಯದಿಂದ, ಕುತಂತ್ರಾಂಶಗಳ ಕಾಟದಿಂದ ಅವು ಹಾಳಾಗದಂತೆ ನೋಡಿಕೊಳ್ಳಲು ಕಡತಗಳನ್ನು ಬ್ಯಾಕಪ್ ಮಾಡಿಡುವುದು ಇಂತಹ ಕ್ರಮಗಳಲ್ಲೊಂದು. ಬಹಳಷ್ಟು ಸಾರಿ ಸಾಫ್ಟ್ ಕಾಪಿಗಳನ್ನು ತೆರೆಯಲು ನಿರ್ದಿಷ್ಟ ತಂತ್ರಾಂಶ ಹಾಗೂ ಫಾಂಟುಗಳೇ ಬೇಕಿರುತ್ತವೆ. ಅಂತಹ ಕಡತಗಳನ್ನು (ಉದಾ: ಪ್ರಕಾಶಕ್ ಫಾಂಟುಗಳನ್ನು ಬಳಸಿ ರೂಪಿಸಿದ ಪೇಜ್‌ಮೇಕರ್ ಕಡತ) ಉಳಿಸಿಡುವಾಗ ಸಾಧ್ಯವಾದರೆ ಅಗತ್ಯ ತಂತ್ರಾಂಶ ಹಾಗೂ ಫಾಂಟುಗಳನ್ನೂ ಉಳಿಸಿಟ್ಟುಕೊಳ್ಳಬಹುದು. ಇದು ಸಾಧ್ಯವಾಗದ ಪಕ್ಷದಲ್ಲಿ ಅಂತಹ ಕಡತಗಳನ್ನು ಪಿಡಿಎಫ್ ರೂಪಕ್ಕಾದರೂ ಬದಲಿಸಿಟ್ಟುಕೊಳ್ಳುವುದು ಒಳ್ಳೆಯದು.

Software
ಸಾಫ್ಟ್‌ವೇರ್
ತಂತ್ರಾಂಶ
ಕಂಪ್ಯೂಟರ್ ತನ್ನ ಕೆಲಸಗಳನ್ನು ಮಾಡಲು ನೀಡುವ ನಿರ್ದೇಶನಗಳ ಸಂಗ್ರಹ
ಕಂಪ್ಯೂಟರ್‌ಗೆ ತನ್ನದೇ ಆದ ಸ್ವಂತ ಬುದ್ಧಿ ಇರುವುದಿಲ್ಲ. ಅದು ಯಾವ ಕೆಲಸ ಮಾಡಬೇಕಾದರೂ ಕೆಲಸದ ಎಲ್ಲ ಹೆಜ್ಜೆಗಳ ವಿವರವನ್ನೂ ಅದಕ್ಕೆ ಹೇಳಿಕೊಡಬೇಕು. ಹೀಗೆ ಕಂಪ್ಯೂಟರಿಗೆ ಪಾಠಹೇಳುವುದು ಸಾಫ್ಟ್‌ವೇರ್ ಅಥವಾ ತಂತ್ರಾಂಶದ ಕೆಲಸ. ನಾವು ಕೊಟ್ಟ ವಿವರಗಳನ್ನು (ಇನ್‌ಪುಟ್) ಬಳಸಿ ಏನೇನು ಲೆಕ್ಕಾಚಾರ ಮಾಡಬೇಕು, ಯಾವ ರೀತಿಯ ಉತ್ತರ (ಔಟ್‌ಪುಟ್) ಕೊಡಬೇಕು ಎನ್ನುವುದನ್ನೆಲ್ಲ ಅದು ಕಂಪ್ಯೂಟರ್‌ಗೆ ವಿವರಿಸುತ್ತದೆ. ವಿವಿಧ ಉದ್ದೇಶ ಹಾಗೂ ಉಪಯೋಗಗಳಿಗಾಗಿ ಅನೇಕ ಬಗೆಯ ತಂತ್ರಾಂಶಗಳು ಬಳಕೆಯಾಗುತ್ತವೆ. ಕಂಪ್ಯೂಟರ್ ತನ್ನ ಕೆಲಸ ಪ್ರಾರಂಭಿಸಲು ನೆರವಾಗುವ ಬಯಾಸ್‌ನಿಂದ ಪ್ರಾರಂಭಿಸಿ ಅದರ ಕೆಲಸಕಾರ್ಯಗಳನ್ನೆಲ್ಲ ನಿಯಂತ್ರಿಸುವ ಆಪರೇಟಿಂಗ್ ಸಿಸ್ಟಂವರೆಗೆ ಎಲ್ಲವೂ ತಂತ್ರಾಂಶಗಳೇ. ಕಂಪ್ಯೂಟರ್ ಬಳಸಿ ಕಡತಗಳನ್ನು ರೂಪಿಸಲು, ಚಿತ್ರಬರೆಯಲು, ಆಟವಾಡಲು, ಹಾಡು ಕೇಳಲು, ಸಿನಿಮಾ ನೋಡಲು ನಾವು ವಿವಿಧ ತಂತ್ರಾಂಶಗಳನ್ನು ಬಳಸುತ್ತೇವೆ. ಕಂಪ್ಯೂಟರ್ ಅಷ್ಟೇ ಅಲ್ಲ, ಮೊಬೈಲ್ ಫೋನ್, ಟ್ಯಾಬ್ಲೆಟ್, ಸೆಟ್‌ಟಾಪ್ ಬಾಕ್ಸ್ ಮುಂತಾದ ಹಲವಾರು ವಿದ್ಯುನ್ಮಾನ ಸಾಧನಗಳಲ್ಲೂ ತಂತ್ರಾಂಶಗಳು ಬಳಕೆಯಾಗುತ್ತವೆ: ನಮಗೆಲ್ಲ ಚಿರಪರಿಚಿತವಾದ ಮೊಬೈಲ್ ಆಪ್‌ಗಳೂ ತಂತ್ರಾಂಶಗಳೇ. ಆಧುನಿಕ ಕಾರುಗಳಲ್ಲಿ, ಟೀವಿ - ಫ್ರಿಜ್ - ವಾಶಿಂಗ್ ಮಶೀನುಗಳ ಕಾರ್ಯಾಚರಣೆಯಲ್ಲೂ ತಂತ್ರಾಂಶಗಳ ಕೈವಾಡ ಇರುತ್ತದೆ.

Software Engineering
ಸಾಫ್ಟ್‌ವೇರ್ ಇಂಜಿನಿಯರಿಂಗ್
(ರೂಪಿಸಬೇಕಿದೆ)
ನಮ್ಮ ಅಗತ್ಯಗಳಿಗೆ ತಕ್ಕಂತೆ ಪರಿಣಾಮಕಾರಿಯಾಗಿ ಕೆಲಸಮಾಡುವ ತಂತ್ರಾಂಶವನ್ನು ನಿಗದಿತ ಅವಧಿ ಹಾಗೂ ವೆಚ್ಚದ ಮಿತಿಯೊಳಗೆ ರೂಪಿಸಲು ನೆರವಾಗುವ ಪ್ರಕ್ರಿಯೆ
ಮಾಹಿತಿ ತಂತ್ರಜ್ಞಾನ ಕ್ಷೇತ್ರದ ಉದ್ಯೋಗಿಗಳನ್ನೆಲ್ಲ ಸಾಫ್ಟ್‌ವೇರ್ ಇಂಜಿನಿಯರುಗಳೆಂದು ಗುರುತಿಸುವುದು ಸಾಮಾನ್ಯ ಅಭ್ಯಾಸ. ಸಾಫ್ಟ್‌ವೇರ್ ಇಂಜಿನಿಯರುಗಳ ಕೆಲಸ ಪ್ರೋಗ್ರಾಮುಗಳನ್ನು - ತಂತ್ರಾಂಶಗಳನ್ನು ರಚಿಸುವುದು ಎನ್ನುವುದೂ ಸಾಮಾನ್ಯವಾಗಿರುವ ಇನ್ನೊಂದು ಅಭಿಪ್ರಾಯ. ಆದರೆ ಸಾಫ್ಟ್‌ವೇರ್ ಇಂಜಿನಿಯರಿಂಗ್ ಕ್ಷೇತ್ರದ ವ್ಯಾಪ್ತಿ ಇಷ್ಟು ಸೀಮಿತವೇನಲ್ಲ. ಇದು ತಂತ್ರಾಂಶ ಅಭಿವೃದ್ಧಿಯನ್ನು ಪ್ರೋಗ್ರಾಮಿಂಗ್‌ಗಷ್ಟೇ ಸೀಮಿತವಾಗಿ ನೋಡದೆ ಅದನ್ನೊಂದು ಕ್ರಮಬದ್ಧ ಪ್ರಕ್ರಿಯೆಯಾಗಿ ರೂಪಿಸಲು ನೆರವಾಗುತ್ತದೆ. ನಮ್ಮ ಅಗತ್ಯಗಳಿಗೆ ತಕ್ಕಂತೆ ಪರಿಣಾಮಕಾರಿಯಾಗಿ ಕೆಲಸಮಾಡುವ ತಂತ್ರಾಂಶವನ್ನು ನಿಗದಿತ ಅವಧಿ ಹಾಗೂ ವೆಚ್ಚದ ಮಿತಿಯೊಳಗೆ ರೂಪಿಸುವುದು ಸಾಫ್ಟ್‌ವೇರ್ ಇಂಜಿನಿಯರಿಂಗ್‌ನ ಮೂಲ ಉದ್ದೇಶ. ತಂತ್ರಾಂಶದ ಉದ್ದೇಶವನ್ನು ನಿಖರವಾಗಿ ಗುರುತಿಸಿ ವಿಶ್ಲೇಷಿಸುವ ಮೂಲಕ ಈ ಪ್ರಕ್ರಿಯೆ ಪ್ರಾರಂಭವಾಗುತ್ತದೆ. ತಂತ್ರಾಂಶದ ಉದ್ದೇಶ ಸ್ಪಷ್ಟವಾದ ನಂತರ ಅದಕ್ಕೆ ಅಗತ್ಯವಾದ ವಿನ್ಯಾಸವನ್ನು (ಡಿಸೈನ್) ಸಿದ್ಧಪಡಿಸಲಾಗುತ್ತದೆ. ತಂತ್ರಾಂಶ ಅಭಿವರ್ಧನೆಯ (ಡೆವೆಲಪ್‌ಮೆಂಟ್) ಕೆಲಸ ಪ್ರಾರಂಭವಾಗುವುದು ಇವೆಲ್ಲ ಮುಗಿದ ನಂತರವೇ. ತಂತ್ರಾಂಶ ರಚನೆ ಮುಗಿದ ತಕ್ಷಣ ಅದನ್ನು ಗ್ರಾಹಕರಿಗೆ ಕೊಟ್ಟುಬಿಡುವಂತಿಲ್ಲ. ಅದನ್ನು ವಿವರವಾಗಿ ಪರೀಕ್ಷಿಸಿ, ಇರಬಹುದಾದ ಕುಂದುಕೊರತೆಗಳನ್ನು ಸೂಕ್ತ ಸಮಯದಲ್ಲಿ ಪತ್ತೆಹಚ್ಚಿ ಸರಿಪಡಿಸುವುದು ಕೂಡ ಮುಖ್ಯ ಎಂದು ಸಾಫ್ಟ್‌ವೇರ್ ಇಂಜಿನಿಯರಿಂಗ್ ಪರಿಕಲ್ಪನೆ ಹೇಳುತ್ತದೆ. ಈ ಎಲ್ಲ ಹಂತಗಳ ವಿವರಗಳನ್ನೂ ಕಡತಗಳಲ್ಲಿ ದಾಖಲಿಸಿ ಭವಿಷ್ಯದ ಬಳಕೆಗಾಗಿ ಉಳಿಸಿಡುವುದು ಕೂಡ ಸಾಫ್ಟ್‌ವೇರ್ ಇಂಜಿನಿಯರಿಂಗ್‌ನ ಭಾಗವೇ.

Software Project Management
ಸಾಫ್ಟ್‌ವೇರ್ ಪ್ರಾಜೆಕ್ಟ್ ಮ್ಯಾನೇಜ್‌ಮೆಂಟ್
(ರೂಪಿಸಬೇಕಿದೆ)
ತಂತ್ರಾಂಶ ಅಭಿವೃದ್ಧಿಯ ಕೆಲಸ ಒಂದು ನಿರ್ದಿಷ್ಟ ಯೋಜನೆಗೆ ಅನುಗುಣವಾಗಿ ನಡೆಯುವಂತೆ ನೋಡಿಕೊಳ್ಳುವ ಪ್ರಕ್ರಿಯೆ
ತಂತ್ರಾಂಶಗಳನ್ನು ರೂಪಿಸುವಾಗ ಕೆಲಸದ ಅಗಾಧತೆ, ಸಂಕೀರ್ಣ ವಿನ್ಯಾಸ ಇವೆಲ್ಲ ಸೇರಿ ತಂತ್ರಾಂಶ ಅಭಿವೃದ್ಧಿಯ ಕೆಲಸ ಬಹಳ ಕ್ಲಿಷ್ಟವಾಗಿಬಿಡುತ್ತದೆ. ನಿಗದಿತ ಅವಧಿಯೊಳಗೆ ನಿರ್ದಿಷ್ಟ ವೆಚ್ಚದಲ್ಲಿ ಬಳಕೆದಾರರ ಅಗತ್ಯಗಳಿಗೆ ಸರಿಹೊಂದುವಂತಹ ತಂತ್ರಾಂಶವನ್ನು ಅಭಿವೃದ್ಧಿಪಡಿಸಬೇಕಾದ ಸವಾಲನ್ನು ಎದುರಿಸುವ ಈ ಕೆಲಸ ಸುಲಭವೇನಲ್ಲ. ಇಂತಹ ಸನ್ನಿವೇಶಗಳಲ್ಲಿ ತಂತ್ರಾಂಶ ಅಭಿವೃದ್ಧಿಯ ಕೆಲಸ ಒಂದು ನಿರ್ದಿಷ್ಟ ಯೋಜನೆಗೆ ಅನುಗುಣವಾಗಿ ನಡೆದರೆ ಮಾತ್ರ ಅದು ಯಶಸ್ವಿಯಾಗುವುದು ಸಾಧ್ಯ. ಹಾಗೊಂದು ಯೋಜನೆಯನ್ನು ರೂಪಿಸಿ ಅದರಂತೆ ತಂತ್ರಾಂಶ ಅಭಿವೃದ್ಧಿಯ ಕೆಲಸ ಕೈಗೊಳ್ಳಲು ನೆರವಾಗುವುದು 'ಸಾಫ್ಟ್‌ವೇರ್ ಪ್ರಾಜೆಕ್ಟ್ ಮ್ಯಾನೇಜ್‌ಮೆಂಟ್' ಎಂಬ ಪರಿಕಲ್ಪನೆ. ನಿರ್ದಿಷ್ಟ ಅವಧಿಯಲ್ಲಿ ನಡೆಯುವ ತಂತ್ರಾಂಶವೊಂದರ ರಚನೆ, ಬದಲಾವಣೆ ಅಥವಾ ಉನ್ನತೀಕರಣದ ಕೆಲಸವನ್ನು ಪ್ರಾಜೆಕ್ಟ್ ಎಂದು ಕರೆಯಬಹುದು. ಸಾಫ್ಟ್‌ವೇರ್ ಕ್ಷೇತ್ರದಲ್ಲಿ ಕೆಲಸಮಾಡುವವರು ಪ್ರಾಜೆಕ್ಟುಗಳ ಬಗ್ಗೆ ಮಾತನಾಡುತ್ತಾರಲ್ಲ, ಅವೂ ಇಂತಹವೇ. ಯಾವುದೇ ಪ್ರಾಜೆಕ್ಟಿಗೆ ಸಾಕಷ್ಟು ನಿರ್ಬಂಧಗಳಿರುತ್ತವೆ: ಸಮಯ, ವೆಚ್ಚ, ವ್ಯಾಪ್ತಿ - ಹೀಗೆ. ಈ ಎಲ್ಲ ನಿರ್ಬಂಧಗಳನ್ನೂ ಅರಿತುಕೊಂಡು ನಮ್ಮ ಕೆಲಸವನ್ನು ಸರಿಯಾಗಿ ನಿಭಾಯಿಸಿದಾಗಲಷ್ಟೆ ಪ್ರಾಜೆಕ್ಟ್ ಯಶಸ್ವಿಯಾಗುವುದು ಸಾಧ್ಯ. ಇದು ಸಾಧ್ಯವಾಗುವ ನಿಟ್ಟಿನಲ್ಲಿ ನೆರವು ನೀಡುವುದು ಸಾಫ್ಟ್‌ವೇರ್ ಪ್ರಾಜೆಕ್ಟ್ ಮ್ಯಾನೇಜ್‌ಮೆಂಟ್‌ನ ಉದ್ದೇಶ. ತಂತ್ರಾಂಶ ತಯಾರಿಯ ಪ್ರಕ್ರಿಯೆಯುದ್ದಕ್ಕೂ ಗ್ರಾಹಕರೊಡನೆ ನಡೆಯುವ ಸಂವಹನ, ತಯಾರಾಗುವ ತಂತ್ರಾಂಶದ ಗುಣಮಟ್ಟ ಮುಂತಾದ ಅಂಶಗಳಿಗೂ ಇಲ್ಲಿ ಪ್ರಾಮುಖ್ಯವಿರುತ್ತದೆ.


logo